ಮನೆ ಮನೆಗೆ ತೆರಳಿ ಲಸಿಕೆ ಹಾಕಿಸಿಕೊಳ್ಳಲು ಜನ ಜಾಗೃತಿ ಮೂಡಿಸಿ, ತಹಸೀಲ್ದಾರ್ ವೈ.ಎಂ. ರೇಣುಕುಮಾರ್ ಸೂಚನೆ

ಅರಕಲಗೂಡು: ಪ್ರತಿ ಹಳ್ಳಿಗಳಲ್ಲಿ ಮತಗಟ್ಟೆ ಅಧಿಕಾರಿಗಳು ಮನೆ ಮನೆಗೆ ತೆರಳಿ ೪೫ ವರ್ಷ ಮೇಲ್ಪಟ್ಟ ವ್ಯಕ್ತಿಗಳ ಪಟ್ಟಿ ತಯಾರಿಸಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವಂತೆ ಮನವೊಲಿಸುವ ಕೆಲಸ ಮಾಡಬೇಕು ಎಂದು ತಹಸೀಲ್ದಾರ್ ವೈ.ಎಂ. ರೇಣುಕುಮಾರ್ ತಿಳಿಸಿದರು.

ತಾಲೂಕಿನ ರಾಮನಾಥಪುರ ನಾಡ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕೋವಿಡ್ ಕಾರ್ಯಪಡೆ ಅಧಿಕಾರಿಗಳ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಭಾಗವಹಿಸಿ ಮಾತನಾಡಿದ ಅವರು, ಹಳ್ಳಿಗಳಲ್ಲಿ ಬಹಳಷ್ಟು ಜನರು ಕರೊನಾ ಚುಚ್ಚುಮದ್ದು ಹಾಕಿಸಿಕೊಳ್ಳಲು ಹೆದರಿ ಹಿಂದೇಟು ಹಾಕುತ್ತಿರುವುದು ಕಂಡುಬಂದಿದೆ. ವ್ಯಾಕ್ಸಿನ್ ಹಾಕಿಸಿಕೊಂಡರೆ ಯಾವುದೇ ಅಡ್ಡಪರಿಣಾಮ ಬೀರುವುದಿಲ್ಲ. ಈ ನಿಟ್ಟಿನಲ್ಲಿ ಮತಗಟ್ಟೆ ಅಧಿಕಾರಿಗಳು ಜನರಿಗೆ ಸೂಕ್ತ ತಿಳಿವಳಿಕೆ ನೀಡಿ ೪೫ ವರ್ಷ ಮೇಲ್ಪಟ್ಟವರ ಪಟ್ಟಿ ಮಾಡಿ, ಲಸಿಕೆ ಹಾಕಿಸಿಕೊಳ್ಳಲು ಪ್ರೇರೇಪಿಸಬೇಕು. ಕೋವಿಡ್ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಒಪ್ಪದ ವ್ಯಕ್ತಿಗಳ ಬಗ್ಗೆ ವರದಿ ನೀಡಬೇಕು ಎಂದು ಸೂಚಿಸಿದರು.

ಕರೊನಾ ಪಾಸಿಟಿವ್ ಕಂಡುಬಂದ ವ್ಯಕ್ತಿಗಳನ್ನು ಕೋವಿಡ್ ಕೇರ್ ಸೆಂಟರ್‌ಗೆ ಸೇರಿಸಲು ಪ್ರತಿ ಗ್ರಾಮ ಪಂಚಾಯಿತಿ ಪಿಡಿಒ ಗಳು ಕಟ್ಟುನಿಟ್ಟಿನ ಕ್ರಮ ವಹಿಸಬೇಕು. ತಪ್ಪಿದ್ದಲ್ಲಿ ಶಿಸ್ತು ಕ್ರಮಕ್ಕಾಗಿ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಬೇಕು. ಪ್ರತಿಯೊಬ್ಬರೂ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ಸುರಕ್ಷತಾ ಕ್ರಮಗಳನ್ನು ಪಾಲಿಸಿ ಸೋಂಕು ತಡೆಗಟ್ಟಲು ಸಹಕರಿಸಬೇಕು ಎಂದು ಹೇಳಿದರು.

ಉಪ ತಹಸೀಲ್ದಾರ್ ಸಿ. ಸ್ವಾಮಿ, ನೋಡೆಲ್ ಅಧಿಕಾರಿ ಅರುಣ್ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ. ಸ್ವಾಮಿಗೌಡ ಮುಂತಾದವರು ಹಾಜರಿದ್ದರು.


                   ಸಂಪಾದಕ - ರವಿ                      

Post a Comment

0 Comments