ದೇವರ ಸ್ವರೂಪದ ವೈದ್ಯರದು ಸಾರ್ಥಕ ಸೇವೆ


ಅರಕಲಗೂಡು: ಕೋವಿಡ್ ಸಂಕಷ್ಟದ ಸಮಯ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯ ಪಾಲಿಗೆ ಅತ್ಯಂತ ಕಠಿಣ ದಿನಗಳಾಗಿದ್ದು ತಮ್ಮ ಜೀವ ಲೆಕ್ಕಿಸದೆ ಶ್ರಮಿಸುತ್ತಿರುವುದು ಶ್ಲಾಘನೀಯ ಸಂಗತಿ ಎಂದು ಶಾಸಕ ಎ.ಟಿ. ರಾಮಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು.

ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಗುರುವಾರ ವಿಶ್ವ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಮ್ಮ ಕುಟುಂಬ ರಕ್ಷಣೆ ಬದಿಗೊತ್ತಿ ವೈದ್ಯರು ಸೇವೆ ಸಲ್ಲಿಸುತ್ತಿದ್ದಾರೆ. ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಾದ ಸಮಯದಲ್ಲಿ ಕರೊನಾ ಸೋಂಕಿತರನ್ನು ಮುಟ್ಟಿ ಚಿಕಿತ್ಸೆ ನೀಡುವ ಮೂಲಕ ವೈದ್ಯ ಸಮೂಹ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಲಕ್ಷಾಂತರ ಜನರಿಗೆ ಚಿಕಿತ್ಸೆ ನೀಡಿ ಪ್ರಾಣ ಕಾಪಾಡಿದ್ದಾರೆ ಎಂದು ಶ್ಲಾಘಿಸಿದರು. 

ಕೋವಿಡ್ ಚಿಕಿತ್ಸೆ ನೀಡುವಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆ ಜಿಲ್ಲೆಯಲ್ಲೆ ಮೊದಲ ಸ್ಥಾನದಲ್ಲಿದೆ. 60 ಹಾಸಿಗೆಗಳಿದ್ದರೂ 80 ಜನರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗಿದೆ. ಇಲ್ಲಿನ ಒತ್ತಡವನ್ನು ತಗ್ಗಿಸುವ ಉದ್ದೇಶದಿಂದ ಕೊಣನೂರು ಸಮುದಾಯ ಆರೋಗ್ಯ ಕೇಂದ್ರವನ್ನು ಕೋವಿಡ್ ಆಸ್ಪತ್ರೆಯಾಗಿ ಮಾರ್ಪಾಡು ಮಾಡಲಾಯಿತು. ಹೋಬಳಿ ಕೇಂದ್ರದಲ್ಲಿ ಕೋವಿಡ್ ಆಸ್ಪತ್ರೆಯನ್ನು ತೆರೆದು ಅಗತ್ಯ ಸವಲತ್ತುಗಳನ್ನು ಒದಗಿಸಿರುವುದು ರಾಜ್ಯದಲ್ಲೆ ಪ್ರಥಮವಾಗಿದೆ. ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿದ್ದು ಎಲ್ಲ ವಿಭಾಗದಲ್ಲೂ ತಜ್ಞ ವೃದ್ಯರು ಕರ್ತವ್ಯ ನಿರ್ವಹಿಸುತ್ತಿದ್ದಾರೆ, ತಾಲೂಕಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೂ ವೈದ್ಯರ ನೇಮಕವಾಗಿದ್ದು ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದರು. 

ತಾಲೂಕು ಆರೋಗ್ಯಾಧಿಕಾರಿ ಡಾ. ಸ್ವಾಮಿಗೌಡ ಮಾತನಾಡಿದರು. ತಹಸೀಲ್ದಾರ್ ವೈ.ಎಂ. ರೇಣುಕುಮಾರ್, ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ದೀಪಕ್ ಉಪಸ್ಥಿತರಿದ್ದರು. ಐವರು ವೈದ್ಯರನ್ನು ಗೌರವಿಸಲಾಯಿತು.


                         ಸಂಪಾದಕ - ರವಿ                  

Post a Comment

0 Comments