ಅರಕಲಗೂಡು: ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಕುರಿತು ಯಾವುದೇ ಗೊಂದಲ ಇಲ್ಲ, ಊಹಾಪೋಹಗಳಿಗೆ ಕಿವಿಗೊಡದೆ ಕಾರ್ಯಕರ್ತರು ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಸಹಕರಿಸಬೇಕು ಎಂದು ಕಾಂಗ್ರೆಸ್ ಮುಖಂಡ ಎಂ.ಟಿ. ಕೃಷ್ಣೇಗೌಡ ಮನವಿ ಮಾಡಿದರು.
ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ಕ್ಷೇತ್ರದಲ್ಲಿ ಎದ್ದಿರುವ ಗೊಂದಲ ಕೇವಲ ವದಂತಿ ಅಷ್ಟೆ, ಕಳೆದ ಹಲವಾರು ವರ್ಷಗಳಿಂದ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಕಾರ್ಯದಲ್ಲಿ ತೊಡಗಿಕೊಂಡು ಕಾರ್ಯಕರ್ತರ ಸಮಸ್ಯೆಗಳಿಗೆ ಅವಿರತ ಶ್ರಮಿಸುತ್ತಿದ್ದೇನೆ. ಇದೀಗ ಕೆಲವರು ಪಕ್ಷದ ಟಿಕೆಟ್ ವಿಚಾರವಾಗಿ ಅನಗತ್ಯವಾಗಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಕಾರ್ಯಕರ್ತರು ದೃತಿಗೆಡಬೇಕಿಲ್ಲ ಎಂದರು.
ಕ್ಷೇತ್ರದಲ್ಲಿ ಕಳೆದ ಮೂರು ದಶಕಗಳಿಂದ ನಮ್ಮ ಕುಟುಂಬ ರಾಜಕೀಯವಾಗಿ ಗುರುತಿಸಿಕೊಂಡು ಜನಸೇವೆ ಮಾಡಿಕೊಂಡು ಬಂದಿದೆ. ಜನರು ಕೂಡ ನಮ್ಮ ಪರ ಒಲವು ವ್ಯಕ್ತಪಡಿಸಿದ್ದು ಕ್ಷೇತ್ರದಾದ್ಯಂತ ನನಗೆ ಅಪಾರ ಜನಬೆಂಬಲ ವ್ಯಕ್ತವಾಗಿದೆ.
ನಮ್ಮ ಕುಟುಂಬ ಕೈಗೊಂಡಿರುವ ಜನಸೇವೆ ಅರಿತು ಪಕ್ಷದ ನಾಯಕರು ಕೂಡ ನನಗೆ ಆಶೀರ್ವಾದ ಮಾಡಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಳೆದ ಒಂದೂವರೆ ವರ್ಷದ ಹಿಂದೆಯೇ ನನಗೆ ಪಕ್ಷದ ಟಿಕೆಟ್ ನೀಡುವ ಅಶ್ವಾಸನೆ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ನಮ್ಮ ನಿವಾಸಕ್ಕೆ ಎರಡು ಸಲ ಭೇಟಿ ನೀಡಿ ಟಿಕೆಟ್ ನೀಡುವ ಭರವಸೆ ನೀಡಿದ್ದು ಎಲ್ಲರನ್ನು ಒಗ್ಗೂಡಿಸಿಕೊಂಡು ಪಕ್ಷ ಸಂಘಟನೆ ಮಾಡುವಂತೆ ಸೂಚನೆ ನೀಡಿದ್ದರು.
ಅದರಂತೆ ಪ್ರತಿ ಹಳ್ಳಿಗಳಿಗೆ ಭೇಟಿ ನೀಡಿ ಪಕ್ಷದ ಬಲವರ್ಧನೆಗೆ ದುಡಿಯುತ್ತಿದ್ದೇನೆ. ಪಕ್ಷ ನನಗೆ ಟಿಕೆಟ್ ನೀಡಲಿದ್ದು ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
0 Comments